ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಸದನದ ಒಳಗೂ ಹಾಗೂ ಹೊರಗೂ ಪ್ರತಿಭಟನೆ ನಡೆಸಿದ್ದು, ಗ್ಯಾರಂಟಿ ಯೋಜನೆಗಳ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸುಳ್ಳು ಹೇಳಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈಗ ಜನರಿಗೆ ಮೋಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಚುನಾವಣೆಗೂ ಮುನ್ನ 5 ಗ್ಯಾರಂಟಿ ಕಾರ್ಡ್ ಗಳನ್ನು ಜನರಿಗೆ ಹಂಚಿದರು. ಈಗ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಜಾರಿಗೆ ವಿಳಂಬ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ ದ್ವೇಷದ ರಾಜಕಾರಾಣ ಮಾಡುತ್ತಿದ್ದಾರೆ. ಅಲ್ಲದೇ ಬಿಜೆಪಿ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ರದ್ದು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.