ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ರಾಜ್ಯದಲ್ಲಿ ಕನ್ನಡಿಗರಿಗೆ ನೀಡಲು ಸೂಕ್ತ ಕಾಯ್ದೆ ರೂಪಿಸಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಇಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ.
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡರ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾರಾಯಣ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಿದ್ದಾರೆ.
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಿ ಎಂದು ಚಳವಳಿ ಮಾಡುವ ಸ್ಥಿತಿಗೆ ಬಂದಿರುವುದು ನಾಚಿಕೆಗೇಡು. ಈಗ ಕನ್ನಡಿಗರು ಒಂದಾಗಿ ನಿಲ್ಲಬೇಕಾದ ಅನಿವಾರ್ಯತೆ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡಲು ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ನಾರಾಯಣಗೌಡ ಹೇಳಿದ್ದಾರೆ.