ನವದೆಹಲಿ: ಯುವ ಸಮೂಹ ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ತಮ್ಮ ಪ್ರತಿಪಾದನೆಯನ್ನು ಪುನರುಚ್ಚರಿಸಿದ್ದಾರೆ.
ಸೋಮವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದ 80 ಕೋಟಿ ಜನ ಉಚಿತ ಪಡಿತರ ಪಡೆಯುತ್ತಿದ್ದಾರೆ. ಇದರ ಅರ್ಥ 80 ಕೋಟಿ ಭಾರತೀಯರು ಬಡತನದಲ್ಲಿದ್ದಾರೆ ಎಂದಾಗಿದೆ. ನಾವು ಕಷ್ಟಪಟ್ಟು ಕೆಲಸ ಮಾಡುವ ಸ್ಥಿತಿಯಲ್ಲಿ ಇಲ್ಲದಿದ್ದರೆ ಯಾರು ಕಷ್ಟಪಟ್ಟು ಕೆಲಸ ಮಾಡುತ್ತಾರೆ ಎಂದು ನಾರಾಯಣ ಮೂರ್ತಿ ಪ್ರಶ್ನಿಸಿದ್ದಾರೆ.
ಸಂಪತ್ತು ಮತ್ತು ಉದ್ಯೋಗ ಸೃಷ್ಟಿಸುವ ಮೂಲಕ ಉದ್ಯಮಿಗಳು ರಾಷ್ಟ್ರ ನಿರ್ಮಾಣದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ. ತಮ್ಮ ಹೂಡಿಕೆದಾರರಿಗೂ ಅವರು ಸಂಪತ್ತನ್ನು ಸೃಷ್ಟಿಸುತ್ತಾರೆ. ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಾರೆ. ಆದ್ದರಿಂದ ಒಂದು ದೇಶ ಬಂಡವಾಳ ಶಾಹಿ ಅಪ್ಪಿಕೊಂಡರೆ ಉತ್ತಮ ಮೂಲ ಸೌಕರ್ಯ ಸೃಷ್ಟಿ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.