ಪುದುಚೇರಿ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕೈ ತಪ್ಪಿದೆ. ಕಾಂಗ್ರೆಸ್ ಸರ್ಕಾರ ಉಳಿಸಿಕೊಳ್ಳಲು ನಾರಾಯಣಸ್ವಾಮಿ ವಿಫಲರಾಗಿದ್ದಾರೆ. ಅಲ್ಲದೆ ಅವರು ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ದಿಕ್ಕುತಪ್ಪಿಸಿ ಸುಳ್ಳು ಹೇಳಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಲಾಗಿದೆ.
ಚುನಾವಣೆ ಉಸ್ತುವಾರಿಯನ್ನು ಮಾತ್ರ ನಾರಾಯಣಸ್ವಾಮಿಗೆ ನೀಡಲಾಗಿದೆ. ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿ ಪುದುಚೇರಿಯಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುದುಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮೀನುಗಾರ ಮಹಿಳೆಯೊಬ್ಬರು ಕಾಂಗ್ರೆಸ್ ನಾಯಕರು ಮತ್ತು ಮುಖ್ಯಮಂತ್ರಿ ವಿರುದ್ಧ ದೂರು ನೀಡಿದ್ದರು. ಅವರು ತಮಿಳಿನಲ್ಲಿ ದೂರು ಹೇಳಿಕೊಂಡಿದ್ದನ್ನ ಭಾಷಾಂತರ ಮಾಡುವ ಸಂದರ್ಭದಲ್ಲಿ ನಾರಾಯಣಸ್ವಾಮಿ ಮಹಿಳೆ ಸರ್ಕಾರದ ಕಾರ್ಯವನ್ನು ಶ್ಲಾಘಿಸಿದ್ದಾರೆ ಎಂದು ರಾಹುಲ್ ಗಾಂಧಿಗೆ ಸುಳ್ಳು ಹೇಳಿದ್ದರು. ನಂತರ ರಾಹುಲ್ ಗಾಂಧಿ ಗಮನಕ್ಕೆ ಈ ವಿಚಾರ ಬಂದಿತ್ತು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾರಾಯಣಸ್ವಾಮಿ ಅವರಿಗೆ ಪಕ್ಷದ ಟಿಕೆಟ್ ನಿರಾಕರಿಸಲಾಗಿದೆ ಎಂದು ಹೇಳಲಾಗಿದೆ.