ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ಇಂದು ನಡೆಸಿದ್ದು, ಇದನ್ನು ಖಂಡಿಸಿ ದೇಶದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಹ ‘ಕೈ’ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಶಾಂತಿನಗರ ವಿಲ್ಸನ್ ಗಾರ್ಡನ್ ಹಾಗೂ ಶೇಷಾದ್ರಿಪುರಂ ಬಳಿ ಎರಡು ಕಾರ್ಯಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಕಾರುಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಸ್ವತಃ ತಾವೇ ಬೆಂಕಿ ಹಚ್ಚಿಕೊಂಡಿದ್ದಾರೆಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಆದರೆ ಘಟನೆ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಕಾರ್ಯಕರ್ತರು ಕಾರಿಗೆ ಬೆಂಕಿ ಹಚ್ಚಿಲ್ಲ. ಇದು ದುಷ್ಕರ್ಮಿಗಳ ಕೃತ್ಯ ಎಂದು ಹೇಳಿದ್ದಾರೆ.