ಬೆಂಗಳೂರು: 2024 -25 ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿಗೆ ಎನ್.ಸಿ.ಇ.ಆರ್.ಟಿ. ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿ ಪೂರ್ವ) ತಿಳಿಸಿದೆ.
ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ(ಎನ್.ಸಿ.ಇ.ಆರ್.ಟಿ.) ಗೃಹ ವಿಜ್ಞಾನ, ಗಣಕ ವಿಜ್ಞಾನ, ಮತ್ತು ಮನಃಶಾಸ್ತ್ರ ವಿಷಯಗಳ ಪಠ್ಯಪುಸ್ತಕಗಳನ್ನು 2024 -25 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿ ಮತ್ತು 2025 -26ನೇ ಸಾಲಿನಿಂದ ದ್ವಿತೀಯ ಪಿಯುಸಿ ತರಗತಿಗಳಿಗೆ ಅಳವಡಿಸಿಕೊಳ್ಳಲಾಗುವುದು. ಇಲಾಖೆಯ ನಿರ್ದೇಶಕಿ ಸಿಂಧೂ ಬಿ. ರೂಪೇಶ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ನೀಟ್, ಜೆಇಇ, ಸಿಇಟಿ ಸೇರಿದಂತೆ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ 2013 ರಿಂದ ಎನ್.ಸಿ.ಇ.ಆರ್.ಟಿ. ಪಠ್ಯಕ್ರಮ ಹಂತ ಹಂತವಾಗಿ ಅಳವಡಿಸಿಕೊಳ್ಳಲಾಗುತ್ತಿದೆ. ಆರಂಭಿಕ ಹಂತದಲ್ಲಿ ವಿಜ್ಞಾನ ವಿಷಯಗಳಿಗೆ ಒತ್ತು ನೀಡಲಾಗಿತ್ತು. ಈಗ ಕಲಾ ಮತ್ತು ವಾಣಿಜ್ಯ ವಿಷಯಗಳಲ್ಲೂ ಎನ್.ಸಿ.ಇ.ಆರ್.ಟಿ. ಪಠ್ಯಕ್ರಮ ಅಳವಡಿಸಿಕೊಳ್ಳಲಾಗುತ್ತಿದೆ.