ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಜೆಡಿಎಸ್ ನೆಲೆ ಭದ್ರಪಡಿಸಿಕೊಳ್ಳಲು ರಾಜಕೀಯ ಸೈದ್ಧಾಂತಿಕ ವಿರೋಧಿಯಾಗಿರುವ ಬಿಜೆಪಿ ಜೊತೆ ಕೈಜೋಡಿಸಲು ಮುಂದಾಗಿದೆ.
ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಸೇರಲು ಜೆಡಿಎಸ್ ಗಂಭೀರ ಚಿಂತನೆ ನಡೆಸಿದ್ದು, ಶೀಘ್ರವೇ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಜುಲೈ 18ರಂದು ದೆಹಲಿಯಲ್ಲಿ ಎನ್.ಡಿ.ಎ. ಮೈತ್ರಿಕೂಟದ ಸಭೆ ನಡೆಯಲಿದ್ದು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಪಕ್ಷದ ಉಳಿವಿಗೆ ಬಿಜೆಪಿಯೊಂದಿಗೆ ಲೋಕಸಭೆ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಬಿಜೆಪಿ -ಜೆಡಿಎಸ್ ಮೈತ್ರಿ ಕಾರಣಕ್ಕಾಗಿ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವೆ ಚರ್ಚೆ ನಡೆದಿದ್ದು, ಬಿಜೆಪಿ -ಜೆಡಿಎಸ್ ಮೈತ್ರಿ ಆದ ನಂತರ ಹೊಸ ಸಮೀಕರಣದೊಂದಿಗೆ ಬಿಜೆಪಿಯಿಂದ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ವಿಧಾನಮಂಡಲ ಅಧಿವೇಶನ ಮುಗಿಯುತ್ತಾ ಬಂದರೂ ಬಿಜೆಪಿ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿಲ್ಲ. ಜುಲೈ 18ರಂದು ಎನ್.ಡಿ.ಎ. ಸಭೆ ನಡೆದ ನಂತರ ವಿಪಕ್ಷ ನಾಯಕರ ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.