ಬೆಂಗಳೂರು: ನ್ಯಾಯಾಲಯಗಳ ಆದೇಶ ಪಾಲಿಸುವಲ್ಲಿ ಸರ್ಕಾರ ಮತ್ತು ಪ್ರಾಧಿಕಾರಗಳು ನಿರ್ಲಕ್ಷ್ಯ, ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
ಈ ಬಗ್ಗೆ ಸರ್ಕಾರ ಮತ್ತು ಪ್ರಾಧಿಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಾಲಯಗಳ ಮೊರೆ ಹೋಗುವುದು ಸಾರ್ವಜನಿಕರ ಮೂಲಭೂತ ಹಕ್ಕಾಗಿದೆ. ಆದೇಶ ಪಾಲಿಸದಿರುವುದು ಜನರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಕೋರ್ಟ್ ಗಳ ಆದೇಶ ಪಾಲಿಸಲು ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷ್ಯ ಸಹಿಸಲಾಗದು. ಕೋರ್ಟ್ ಆದೇಶ ಜಾರಿ ವಿಳಂಬದಿಂದ ನ್ಯಾಯ ವಂಚಿಸಿದಂತಾಗುತ್ತದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಕಟುವಾಗಿ ಟೀಕಿಸಿದೆ.
ಈ ಅರ್ಜಿಯ ಸಂಬಂಧ ಬಿಬಿಎಂಪಿ, ಬಿಡಿಎ, ಕೆಐಎಡಿಬಿ ಸೇರಿದಂತೆ ಇನ್ನಿತರ ಸರ್ಕಾರಿ ಇಲಾಖೆಗಳು ಮತ್ತು ಪ್ರಾಧಿಕಾರಗಳಿಗೆ ನೋಟಿಸ್ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.