ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಮೂಲಕ ಅಪಘಾತಕ್ಕೆ ಕಾರಣವಾಗುವ ಆರೋಪಿಗಳಿಗೆ ಕನಿಷ್ಠ ಶಿಕ್ಷೆ ನೀಡುವುದು ಅಗತ್ಯ, ಇಲ್ಲವಾದರೆ ಇದರಿಂದ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಪ್ರಕರಣದ ವಿವರ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಸಂತೋಷ್ ಎಂಬವರು ಅಜಾಗರೂಕತೆಯಿಂದ ಆಂಬುಲೆನ್ಸ್ ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿ ಮತ್ತೊಬ್ಬ ಕಾರು ಚಾಲಕ ಸಾವಿಗೀಡಾಗಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯ ಸಂತೋಷ್ ಅವರಿಗೆ ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.
ಇದನ್ನು ಪ್ರಶ್ನಿಸಿ ಸಂತೋಷ್ ಹೈಕೋರ್ಟ್ ನಲ್ಲಿ ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉಮೇಶ್ ಎಂ ಅಡಿಗ ಅವರಿದ್ದ ಏಕಸದಸ್ಯ ಪೀಠ ಮೇಲ್ಕಂಡಂತೆ ಅಭಿಪ್ರಾಯ ವ್ಯಕ್ತಪಡಿಸಿ, ಸಂತೋಷ್ ಅವರಿಗೆ ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ಆರು ತಿಂಗಳ ಜೈಲು ಶಿಕ್ಷೆಯನ್ನು ರದ್ದುಗೊಳಿಸಲು ನಿರಾಕರಿಸಿದೆ.