ಬೆಂಗಳೂರು: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆಗೆ ಸಚಿವರು ನಿರ್ಧಾರ ಕೈಗೊಂಡಿದ್ದಾರೆ.
ಕಾನೂನು ಸಚಿವ ಹೆಚ್.ಕೆ. ಪಾಟೀಲ್ ವಿಶೇಷ ಕೋರ್ಟ್ ಸ್ಥಾಪನೆಗೆ ನಿರ್ಧಾರ ಕೈಗೊಂಡಿದ್ದು, ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ತನಿಖೆಗೆ ವಿಶೇಷ ಕೋರ್ಟ್ ಸ್ಥಾಪನೆ ಮಾಡಲಾಗುವುದು. ಈ ಕುರಿತಾಗಿ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಚಿವ ಹೆಚ್.ಕೆ. ಪಾಟೀಲ್ ಪತ್ರ ಬರೆದು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.
ಹುಬ್ಬಳ್ಳಿಯ ನೇಹಾ ಹತ್ಯೆ ಘಟನೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿ, ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವ ಮೂಲಕ ಶೀಘ್ರ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದರು.