
ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ನೇಹಾ ಪೋಷಕರನ್ನು ಭೇಟಿಯಾಗಿ ಸ್ವಾಂತ್ವನ ಹೇಳಿ ಧೈರ್ಯ ತುಂಬಿದರು.
ಹುಬ್ಬಳ್ಳಿಯ ಬಿಡ್ನಾಳದ ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನೇಹಾ ತಂದೆ ನಿರಂಜನ್ ಹಾಗೂ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನೇಹಾ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ನಾನೊಬ್ಬ ತಾಯಿಯಾಗಿ ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ಹೇಳಿದರು.
ಇಂತಹ ಸಂದರ್ಭದಲ್ಲಿ ಯಾವುದೇ ರಾಜಕೀಯ ಮಾತುಗಳು ಬೇಡ. ಬೇರೆ ಯಾವ ವಿಷಯದ ಬಗ್ಗೆಯೂ ಮಾತನಾಡುವ ಸಂದರ್ಭ ಇದಲ್ಲ. ಆ ಹೆಣ್ಣು ಮಗಳಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ಇದೆ. ನಿರಂಜನ್ ಹಿರೇಮಠ ಅವರು ನಮ್ಮ ಪಕ್ಷದ ಕಾರ್ಪೊರೇಟರ್. ಅವರ ಜೊತೆಗೆ ನಾವಿದ್ದೇವೆ. ಅವರ ಮಗಳಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.