ಮೈಸೂರು: ಮಂಡ್ಯ ಜಿಲ್ಲೆಯ ನೆಲಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣ ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ವಿಪಕ್ಷ ಬಿಜೆಪಿ-ಜೆಡಿಎಸ್ ನಾಯಕರು ಸರ್ಕಾರದ ಹಗರಣ ಮುಚ್ಚಿ ಹಾಕಲು ಕಾಂಗ್ರೆಸ್ ನಾಯಕರೇ ಮಾಡಿರುವ ಕೃತ್ಯ ಎಂದು ಆರೋಪಿಸಿದ್ದಾರೆ. ಆದರೆ ಆಡಳಿತಾರೂಢ ಕಾಂಗ್ರೆಸ್ ನಾಯಕರು ಇದು ಬಿಜೆಪಿ-ಜೆಡಿಎಸ್ ಕೃತ್ಯ ಎಂದು ತಿರುಗೇಟು ನೀಡಿದ್ದಾರೆ.
ಈ ಮಧ್ಯೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣ ಆರ್.ಎಸ್.ಎಸ್, ಬಿಜೆಪಿ-ಜೆಡಿಎಸ್ ನವರ ಪೂರ್ವ ನಿಯೋಜಿತ ಕೃತ್ಯ ಎಂದು ಹೇಳಿದ್ದಾರೆ.
ನಾಗಮಂಗಲದ ಗಲಭೆ ಪ್ರಕರಣದಲ್ಲಿ ಭಾಗಿಯಾಗಿರುವುದು ಯುವಕರು. 20 ಜನ ಹಿಂದೂಗಳು, 30 ಜನ ಮುಸ್ಲಿಂರು ಭಾಗಿಯಾಗಿದ್ದಾರೆ. ಇದು ಆರ್.ಎಸ್.ಎಸ್, ಬಿಜೆಪಿ ಹಾಗೂ ಜೆಡಿಎಸ್ ಪೂರ್ವ ನಿಯೋಜಿತ ಕೃತ್ಯ. ಈ ಬಗ್ಗೆ ಗೃಹ ಸಚಿವರು ದಾಖಲೆ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ನಾಯಕರು ನೆಲಮಂಗಲಕ್ಕೆ ಹೋಗಿ ಪ್ರಚೋದನಕಾರಿ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಮೊದಲಾದವರು ಒಂದು ಸಮುದಾಯದವರನ್ನು ಬೈದಿದ್ದಾರೆ. ಇವರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದರು.