
ಮಂಗಳೂರು: ಈ ವರ್ಷ ಯಾವುದೇ ಪಠ್ಯ ಕಡಿತಗೊಳಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಕುಕ್ಕೆಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ವರ್ಷ ಪಠ್ಯ ಕಡಿತಗೊಳಿಸಿದರೆ ಮುಂದಿನ ವರ್ಷದ ಶಿಕ್ಷಣದ ಮೇಲೆ ಪರಿಣಾಮವುಂಟಾಗುತ್ತದೆ. ಉಪನ್ಯಾಸಕರು, ಶಿಕ್ಷಕರು ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಪಠ್ಯ ಪೂರ್ಣಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಮಾರ್ಚ್, ಏಪ್ರಿಲ್ ನಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆಸಲು ಇಲಾಖೆ ಯೋಜನೆ ಸಿದ್ಧಪಡಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಮದನಗೋಪಾಲ್ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. 2022 -23ನೇ ಶೈಕ್ಷಣಿಕ ಸಾಲಿನಿಂದ ರಾಜ್ಯಾದ್ಯಂತ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗುವುದು. ಆರಂಭಿಕ ಹಂತದಲ್ಲಿ ಪೂರ್ವ ಪ್ರಾಥಮಿಕ, ಮೂರನೇ ತರಗತಿ ಮತ್ತು 9ನೇ ತರಗತಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನವಾಗಲಿದೆ ಎಂದು ಸಚಿವರು ಹೇಳಿದ್ದಾರೆ.