ಬೆಳಗಾವಿ: ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುವುದು ನಮ್ಮ ಬದ್ಧತೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ರಾಜ್ಯ ಶಿಕ್ಷಣ ನೀತಿ ಬಗ್ಗೆ ಚರ್ಚೆಗೆ ಸಿದ್ಧವಿದ್ದೇವೆ. ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಸಮಿತಿ ರಚಿಸಿದ್ದು, ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಬಿಜೆಪಿ ಆಡಳಿತವಿದ್ದರೂ ಅನೇಕ ರಾಜ್ಯಗಳಲ್ಲಿ ಎನ್ಇಪಿ ಜಾರಿ ಮಾಡಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ರಾಜ್ಯ ಶಿಕ್ಷಣ ನೀತಿಯ ವಿಜ್ಞಾನ ಪಠ್ಯಗಳನ್ನು ಎನ್.ಸಿ.ಇ.ಆರ್.ಟಿ.ಯವರೇ ಕೊಡುತ್ತಾರೆ. ನಾವು ಪ್ರತ್ಯೇಕವಾಗಿ ಪಠ್ಯಪುಸ್ತಕ ರಚಿಸಲ್ಲ. ಸಾಮಾಜಿಕ ಜವಾಬ್ದಾರಿ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಕೃತಿಗೆ ಅನುಗುಣವಾಗಿ ತೀರ್ಮಾನ ಕೈಗೊಳ್ಳುತ್ತೇವೆ. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಎನ್ಇಪಿ ಬದಲಿಗೆ ಎಸ್ಇಪಿ ಜಾರಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.