ಬೆಳಗಾವಿ(ಸುವರ್ಣಸೌಧ): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ -2020 ಅನ್ನು ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಗುರುವಾರ ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದ ಸಚಿವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎನ್ಇಪಿಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿಲ್ಲ. ಆದರೆ, ಎನ್ಇಪಿಗಿಂತ ಹೆಚ್ಚು ಪರಿಣಾಮಕಾರಿಯಾಗಿ ಗುಣಾತ್ಮಕ ಶಿಕ್ಷಣ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರತಿಪಕ್ಷ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಎನ್. ರವಿಕುಮಾರ್, ಡಾ.ವೈ.ಎ. ನಾರಾಯಣಸ್ವಾಮಿ, ಟಿ.ಎ. ಶರವಣ, ಛಲವಾದಿ ನಾರಾಯಣ ಸ್ವಾಮಿ. ಮೊದಲಾದವರು ಎನ್ಇಪಿ ಕುರಿತು ಪ್ರಶ್ನಿಸಿದಾಗ ಚರ್ಚೆಯಲ್ಲಿ ಭಾಗವಹಿಸಿದ್ದ ಸಚಿವರು, ಎನ್ಇಪಿ ರದ್ದುಗೊಳಿಸಿಲ್ಲ. ಗುಣಾತ್ಮಕ ಶಿಕ್ಷಣ ಪರಿಣಾಮಕಾರಿ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.