ಬೆಳಗಾವಿ : ಬೆಂಗಳೂರು, ಮೈಸೂರು ಮತ್ತು ಬೆಳಗಾವಿ ವಿಭಾಗದ ಎಲ್ಲಾ ಡಯಾಲಿಸಿಸ್ ಕೇಂದ್ರಗಳಿಗೆ ಹೊಸ ಡಯಾಲಿಸಿಸ್ ಯಂತ್ರಗಳ ಅಳವಡಿಕೆಗೆ ಟೆಂಡರ್ ಅಂತಿಮಗೊಳಿಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ಯಂತ್ರಗಳ ಅಳವಡಿಕೆ ಕಾರ್ಯ ಆರಂಭಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆಯನ್ನು ಸುವ್ಯವಸ್ಥೆಗೆ ತರಲು ಹಾಗೂ ಸಮಪರ್ಕವಾಗಿ ನಿರ್ವಹಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಡಯಾಲಿಸಿಸ್ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸುವ ಕುರಿತು ಸರ್ಕಾರ ಮಾತುಕತೆ ನಡೆಸಿದ್ದು, ನೌಕರರು ಈಗಾಗಲೇ ಪ್ರತಿಭಟನೆಯನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದರು.
ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆ ವಹಿಸಿಕೊಂಡಿದ್ದ BRS ಮತ್ತು ESKAG ಸಂಸ್ಥೆಗಳು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದು, ಈ ಹಿನ್ನಲೆಯಲ್ಲಿ ಈ ಎರಡೂ ಸಂಸ್ಥೆಗಳಿಗೆ ದಂಡ ವಿಧಿಸಲಾಗಿದ್ದು, ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇನೆ. ಸದ್ಯ ಆರೋಗ್ಯ ಇಲಾಖೆಯ ವತಿಯಿಂದಲೇ ಡಯಾಲಿಸಿಸ್ ಕೇಂದ್ರಗಳನ್ನು ನಿರ್ವಹಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪಿಪಿಪಿ ಮಾದರಿಯಲ್ಲಿ ರಾಜ್ಯಾದ್ಯಂತ 800 ಏಕ ಬಳಕೆಯ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲು ಕ್ರಮ ವಹಿಸಲಾಗುತ್ತಿದೆ. ಮೂರು ವಿಭಾಗಗಳಲ್ಲಿ ಹೊಸ ಟೆಂಡರ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದು, ಮುಂದಿನ ಒಂದು ತಿಂಗಳ ಒಳಗಾಗಿ ಹೊಸ ಯಂತ್ರಗಳ ಅಳವಡಿಕೆ, ಸಿಬ್ಬಂದಿ ನೇಮಕ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಆದೇಶ ನೀಡಲಾಗಿದೆ ಎಂದರು.
ಡಯಾಲಿಸಿಸ್ ಕೇಂದ್ರಗಳ ಕುರಿತಾದ ಎಲ್ಲಾ ಶಾಸಕರ ಭಾವನೆಗಳನ್ನು ಅರ್ಥಮಾಡಿಕೊಂಡಿದ್ದೇನೆ. ಶೀಘ್ರದಲ್ಲೇ ಎಲ್ಲಾ ಆಸ್ಪತ್ರೆಗಳಲ್ಲೂ ಡಯಾಲಿಸಿಸ್ ಸೇವೆಗಳನ್ನು ಸಮಪರ್ಕವಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.