ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.
ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರರಾಗಿರುವ ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶದ ಮೇರೆಗೆ ಶಾಸಕ ವಿಜಯೇಂದ್ರ ಯಡಿಯೂರಪ್ಪ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಪಕ್ಷ ಸಂಘಟನೆ ಮತ್ತು ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ವಿಜಯೇಂದ್ರ ಪ್ರಮುಖ ಪಾತ್ರ ವಹಿಸಿದ್ದಾರೆ. ಬಿಜೆಪಿಗೆ ನೆಲೆಯೇ ಇಲ್ಲದ ಕ್ಷೇತ್ರಗಳಲ್ಲಿಯೂ ಉಪಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ವಿಜಯೇಂದ್ರ ಪಾತ್ರ ಮಹತ್ವದ್ದು. ಅವರ ಸಂಘಟನಾ ಶಕ್ತಿಯನ್ನು ಗುರುತಿಸಿ ನಳಿನ್ ಕುಮಾರ್ ಕಟೀಲು ಅವರಿಂದ ತೆರವಾದ ಸ್ಥಾನಕ್ಕೆ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ನಂತರ ಲಿಂಗಾಯಿತ ಸಮುದಾಯ ಬಿಜೆಪಿಯಿಂದ ದೂರವಾಗಿದ್ದು, ಈ ನಷ್ಟ ತುಂಬಿಕೊಳ್ಳುವ ಉದ್ದೇಶದಿಂದ ಬಿಜೆಪಿ ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ನೀಡಿದೆ. ಯಡಿಯೂರಪ್ಪ ಸಿಎಂ ಸ್ಥಾನ ತ್ಯಜಿಸಿದ ನಂತರ ರಾಜ್ಯದಲ್ಲಿ ಬಿಜೆಪಿ ಬಲ ಕಡಿಮೆಯಾಗಿದೆ. ಹೀಗಾಗಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.