ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಪಕ್ಷದಲ್ಲಿ ಘಟಾನುಘಟಿ ನಾಯಕರು ರಾಜ್ಯಾಧ್ಯಕ್ಷ ಹುದ್ದೆಗೆ ಪೈಪೋಟಿ ನಡೆಸಿದ್ದರೂ ವಿಜಯೇಂದ್ರ ಅವರನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಬಿಗ್ ಶಾಕ್ ನೀಡಿದ್ದಾರೆ.
ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲು ಅವರ ಅವಧಿ ಪೂರ್ಣಗೊಂಡಿದ್ದರೂ ಮತ್ತು ವಿಧಾನಸಭೆ ಚುನಾವಣೆ ನಡೆದು ಮೂರ್ನಾಲ್ಕು ತಿಂಗಳೇ ಕಳೆದರೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಗಳಿಗೆ ಪಕ್ಷದ ವರಿಷ್ಠರು ಯಾರನ್ನೂ ಆಯ್ಕೆ ಮಾಡಿರಲಿಲ್ಲ.
ಈಗ ಬದಲಾದ ಸನ್ನಿವೇಶದಲ್ಲಿ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಪ್ರಮುಖವಾಗಿ ಸಿ.ಟಿ. ರವಿ, ಸುನಿಲ್ ಕುಮಾರ್. ಶೋಭಾ ಕರಂದ್ಲಾಜೆ, ಬಸವನಗೌಡ ಪಾಟೀಲ್ ಯತ್ನಾಳ್, ಸೋಮಣ್ಣ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದರು. ಹಲವರ ಹೆಸರುಗಳು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿದ್ದವು. ಆದರೆ, ಬಿಜೆಪಿ ವರಿಷ್ಠರು ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಮೂಲಕ ಹಿರಿಯ ನಾಯಕರಿಗೆ ಶಾಕ್ ನೀಡಿದ್ದಾರೆ.
ಈ ಆಯ್ಕೆಯ ಹಿಂದೆ ಜಾತಿ ಲೆಕ್ಕಾಚಾರವೂ ಇದೆ. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಲಿಂಗಾಯಿತ ಸಮುದಾಯ ಬಿಜೆಪಿಯಿಂದ ದೂರವಾಗಿದೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಎನ್.ಡಿ.ಎ. ಮೈತ್ರಿಕೂಟ ಸೇರಿರುವುದರಿಂದ ಲಿಂಗಾಯಿತ ಸಮುದಾಯಕ್ಕೆ ನಾಯಕತ್ವ ನೀಡುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಪ್ರಭಾವಿ ಸಮುದಾಯಗಳಾದ ಒಕ್ಕಲಿಗರು, ಲಿಂಗಾಯಿತರ ಸಮೀಕರಣದ ಲೆಕ್ಕಾಚಾರವೂ ಇದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಬಿಜೆಪಿ ಸಂಘಟನೆ, ಚುನಾವಣೆ ಕಾರ್ಯತಂತ್ರ ರೂಪಿಸುವಲ್ಲಿ ವಿಜಯೇಂದ್ರ ಪ್ರಮುಖ ಪಾತ್ರ ವಹಿಸಿದ್ದಾರೆ. ಉಪ ಚುನಾವಣೆಗಳಲ್ಲಿ ಬಿಜೆಪಿಗೆ ನೆಲೆ ಇಲ್ಲದ ಕ್ಷೇತ್ರಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ವಿಜಯೇಂದ್ರ ಪಾತ್ರ ಮಹತ್ವದ್ದಾಗಿದೆ. ರಾಜ್ಯದಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡಿರುವ ವಿಜಯೇಂದ್ರ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಹೆಚ್ಚಿನ ಸಂಪರ್ಕ ಹೊಂದಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.