
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಕ್ಯಾಬಿನೆಟ್ ಕಾರ್ಯದರ್ಶಿ, ಪ್ರಧಾನಮಂತ್ರಿಯ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ, ನೀತಿ ಆಯೋಗದ ಸದಸ್ಯರು ಸೇರಿದಂತೆ ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿದ್ದು, ಸೋಂಕು ತಡೆಗೆ ಹೊಸ ನಿರ್ಬಂಧ ಜಾರಿಗೊಳಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಭಾರತದಲ್ಲಿ ಭಾನುವಾರ ಒಂದೇ ದಿನ 93,249 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ವರ್ಷ ಏಕದಿನದ ಅತಿಹೆಚ್ಚು ಸಂಖ್ಯೆಯ ಪ್ರಕರಣ ದಾಖಲಾದ ದಿನ ಇದಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ ಹೊಸ ನಿರ್ಬಂಧಗಳನ್ನು ಜಾರಿಗೊಳಿಸುವ ಬಗ್ಗೆ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.