ಬೆಂಗಳೂರು: ಹೊಸ ವರ್ಷಾಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನ್ಯೂ ಇಯರ್ ಗೆ ಪೊಲೀಸ್ ಇಲಾಖೆ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಮಿಷ್ನರ್ ಬಿ.ದಯಾನಂದ್, ಹೊಸ ವರ್ಷಾಚರಣೆ ವೇಳೆ ಮಹಿಳೆಯರು, ಮಕ್ಕಳಿಗೆ ಯಾವುದೇ ಸಮಸ್ಯೆಗಳಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ. ಹೊಸ ವರ್ಷಾಚರಣೆ ವೇಳೆ ಜನರ ಸುರಕ್ಷತೆ ನಮ್ಮ ಆದ್ಯ ಕರ್ತವ್ಯ ಎಂದು ತಿಳಿಸಿದರು.
ಬಿಬಿಎಂಪಿ, ಬಿಎಂಟಿಸಿ, ಅಬಕಾರಿ ಇಲಾಖೆ, ಆರೋಗ್ಯ ಇಲಾಖೆ, ಅಗ್ನಿಶಾಮಕ, ಮಾಲಿನ್ಯ ನಿಯಂತ್ರಣ ಮಂಡಳಿ, ಬಿಎಂ ಆರ್ ಸಿ ಎಲ್ , ಬೆಸ್ಕಾಂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇವೆ. ಹೊಸ ವರ್ಷಾಚರಣೆ ಭದ್ರತೆಗಾಗಿ ಸಿವಿಲ್ ಡ್ರೆಸ್ ಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು. ವಾರದಿಂದ ನಿರಂತರವಾಗಿ ಡ್ರಗ್ ಅಡಿಕ್ಟ್ ಗಳ ಮೇಲೆ ನಿಗಾ ವಹಿಸಲಾಗಿದೆ. ಅಧಿಕ ಮದ್ಯ ಸಂಗ್ರಹ, ಅನಧಿಕೃತ ಮದ್ಯ ಮಾರಾಟದ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಡಿಸೆಂಬರ್ 31ರ ಮಧ್ಯರಾತ್ರಿ 1 ಗಂಟೆಯವರೆಗೆ ಕ್ಲಬ್ ಗಳಿಗೆ ಅವಕಾಶ ನೀಡಲಾಗುವುದು. ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಬೆಂಗಳೂರಿನ ಎಲ್ಲಾ ಫ್ಲೈ ಓವರ್ ಗಳನ್ನು ಬಂದ್ ಮಾಡಲಾಗುವುದು. ಏರ್ ಪೋರ್ಟ್ ರಸ್ತೆ ಹೊರತುಪಡಿಸಿ ಉಳಿದೆಡೆಗಳಲ್ಲಿ ಸಿಸಿಟಿವಿ ಅಳವಡಿಸಲಾಗುವುದು ಎಂದು ತಿಳಿಸಿದರು.