ಮಡಿಕೇರಿ: ಮೀಸಲು ಅರಣ್ಯ ಪ್ರದೇಶದಲ್ಲಿ ಹೊಸ ವರ್ಷ ಆಚರಣೆ ಪಾರ್ಟಿ ಮಾಡಲು ಹೋಗಿದ್ದ 30 ಮಂದಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದೆ.
ಮಡಿಕೇರಿ ತಾಲೂಕಿನ ಭಾಗಮಂಡಲ ಸಮೀಪದ ಪಟ್ಟಿಘಾಟ್ ಮೀಸಲು ಅರಣ್ಯದ ಕೋಳಿಕಬೆಟ್ಟದಲ್ಲಿ ಅಕ್ರಮ ಪ್ರವೇಶ ಮಾಡಿ ಪಾರ್ಟಿ ಮಾಡುತ್ತಿರುವುದನ್ನು ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 30 ಜನರನ್ನು ವಶಕ್ಕೆ ಪಡೆದು ಮುಚ್ಚಳಿಕೆ ಬಳಸಿಕೊಂಡು ಬಿಡುಗಡೆ ಮಾಡಲಾಗಿದೆ.
ಮೀಸಲು ಅರಣ್ಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಹೊಸ ವರ್ಷಾಚರಣೆ ಪಾರ್ಟಿ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ಭಾಗಮಂಡಲ ವಲಯ ಅರಣ್ಯ ಅಧಿಕಾರಿ ರವೀಂದ್ರ ನೇತೃತ್ವದ ತಂಡ ಬುಧವಾರ ಬೆಳಗಿನ ಜಾವ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಈ ಬಗ್ಗೆ ಮಾಹಿತಿ ನೀಡಿ, ಮೀಸಲು ಅರಣ್ಯದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಇಲ್ಲ. ಅನುಮತಿ ಕೂಡ ನೀಡುವುದಿಲ್ಲ. ಹೀಗಿದ್ದರೂ ಅಕ್ರಮವಾಗಿ ಪ್ರವೇಶಿಸಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.