ಮಂಗಳೂರು: ರಾಜ್ಯದ ಮಂಗಳೂರು, ಬೆಂಗಳೂರು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಇಂದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್.ಡಿ.ಪಿ.ಐ. ಮತ್ತು ಪಿಎಫ್ಐ ಕಚೇರಿಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ದಾಳಿಯನ್ನು ವಿರೋಧಿಸಿ ಎಸ್.ಡಿ.ಪಿ.ಐ. ಮತ್ತು ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
‘ಗೋ ಬ್ಯಾಕ್ ಎನ್ಐಎ’ ಎಂದು ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದು, ಎನ್ಐಎ ದಾಳಿ ಹಿನ್ನಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಪ್ರತಿಭಟನೆ ನಡೆಸಿ ಹೈಡ್ರಾಮಾ ಮಾಡಿದ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಎನ್ಐಎ ತಂಡ ದಾಳಿ ಮಾಡಿದೆ. ದಾಳಿ ಖಂಡಿಸಿ ಕೆಲವರು ಪ್ರತಿಭಟನೆ ಮಾಡುತ್ತಿದ್ದರು. ಪೊಲೀಸರ ಮನವಿಗೂ ಬಗ್ಗದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಈ ಭಾಗ ಸೂಕ್ಷ್ಮ ಪ್ರದೇಶವಾಗಿದ್ದರಿಂದ ಅವರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಜನ ಯಾವುದೇ ರೀತಿಯ ವದಂತಿಗಳಿಗೆ ಕಿವಿ ಕೊಡಬಾರದು. ಇದು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಪ್ರತಿಭಟನೆಗೆ ಅವಕಾಶ ನೀಡಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.