ಬೆಂಗಳೂರು: 34 ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಆದರೆ ಕೆಲ ನಿಗಮಗಳ ಅಧ್ಯಕ್ಷರ ನೇಮಕದಲ್ಲಿ ಸರ್ಕಾರ ಎಡವಟ್ಟು ಮಾಡಿದೆ.
ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರ ನೇಮಕದಲ್ಲಿ ಅವಕಾಶವೇ ಇಲ್ಲದಿದ್ದರೂ ಸರ್ಕಾರ ಅಧ್ಯಕ್ಷರ ನೇಮಕ ಮಾಡಿ ತರಾತುರಿಯಲ್ಲಿ ಆದೇಶ ಹೊರಡಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.
ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಆದರೆ ಕ್ರೀಡಾ ಪ್ರಾಧಿಕಾರದ ಬೈಲಾದಲ್ಲಿ ಇದಕ್ಕೆ ಅವಕಾಶವಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಕ್ರೀಡಾ ಸಚಿವರೇ ಪ್ರಾಧಿಕಾರದ ಅಧ್ಯಕ್ಷರಾಗಿರುತ್ತಾರೆ. ಹಾಗಾಗಿ ಕ್ರೀಡಾ ಸಚಿವ ನಾಗೇಂದ್ರ ಅವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಕ್ರೀಡಾ ಪ್ರಾಧಿಕಾರಕ್ಕೆ ಕೇವಲ ಉಪಾಧ್ಯಕ್ಷರನ್ನು ನೇಮಿಸಲು ಮಾತ್ರ ಸರ್ಕಾರಕ್ಕೆ ಅವಕಾಶವಿರುತ್ತದೆ. ಆದರೆ ಸರ್ಕಾರ ನಿಗಮ ಮಂಡಳಿ ನೇಮಕಾತಿಯಲ್ಲಿ ವಿಜಯಾನಂದ ಕಾಶಪ್ಪನವರ್ ಅವರನ್ನು ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿರುವುದು ಗೊಂದಲಕ್ಕೆ ಕಾರಣವಾಗಿದೆ. ಅಲ್ಲದೇ ಈ ಬಗ್ಗೆ ವಿಜಯಾನಂದ ಕಾಶಪ್ಪನವರ್ ಕೂಡ ಸರ್ಕಾರದ ತೀರ್ಮಾನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.