ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇವತ್ತು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಟಿ ಕರೆದಿದ್ದು, ನೈಟ್ ಕರ್ಫ್ಯೂ, ಲಾಕ್ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನೈಟ್ ಕರ್ಫ್ಯೂ ಜಾರಿಗೊಳಿಸುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್ ಅವರು ನೈಟ್ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಹೇಳಿದ್ದು, ಗೊಂದಲ ಮೂಡಿಸಿದೆ.
ಸಿಎಂ ಮಧ್ಯಾಹ್ನ ಪತ್ರಿಕಾಗೋಷ್ಠಿಯಲ್ಲಿ ಅತಿದೊಡ್ಡ ಘೋಷಣೆ ಮಾಡುತ್ತಾರೆ ಎನ್ನುವ ನಿರೀಕ್ಷೆ ಇದ್ದು, ಗೊಂದಲಕ್ಕೆ ಮಧ್ಯಾಹ್ನ ತೆರೆ ಬೀಳಲಿದೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ರೂಪಾಂತರ ಕೊರೋನಾ ವೈರಸ್ ವ್ಯಾಪಕವಾಗಿ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಇಲ್ಲವೇ ಕಠಿಣ ನಿಯಮ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹೊಸ ವರ್ಷಾಚರಣೆ ವೇಳೆ ಸೋಂಕು ತಡೆಗೆ ಅಗತ್ಯವಾದರೆ ರಾಜ್ಯಗಳು ನೈಟ್ ಕರ್ಫ್ಯೂ ಸೇರಿ ನಿಯಮ ಜಾರಿಗೊಳಿಸಬಹುದೆಂದು ಕೇಂದ್ರ ಸರ್ಕಾರ ಹೇಳಿರುವುದರಿಂದ ಸಿಎಂ ಪತ್ರಿಕಾಗೋಷ್ಠಿಯ ಬಗ್ಗೆ ಕುತೂಹಲ ಹೆಚ್ಚಾಗಿದೆ ಎನ್ನಲಾಗಿದೆ.