ಕೋಝಿಕೋಡ್: ಮಾರಣಾಂತಿಕ ನಿಫಾ ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೊಯಿಲಾಂಡಿ ನಿವಾಸಿ ಅನಿಲ್ ಕುಮಾರ್ ಎಂಬ ಪತ್ರಿಕೆ ಏಜೆಂಟ್ ವಿರುದ್ಧ ನಿನ್ನೆ ರಾತ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅವರು ನಿಫಾಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಿದ್ದರು. ನಿಫಾ ಫಾರ್ಮಾ ಕಂಪನಿಗಳು ಸೃಷ್ಟಿಸಿದ ನಕಲಿ ಸೃಷ್ಟಿ ಎಂದು ಪೋಸ್ಟ್ ಹಾಕಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆ ಮತ್ತು ಜನರು ದೂರು ನೀಡಲು ಪ್ರಾರಂಭಿಸಿದಾಗ ಅವರು ಅದನ್ನು ಅಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಮತ್ತು ಕೇರಳ ಪೊಲೀಸ್ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಠಾಣೆಗೆ ಕರೆಸಿಕೊಂಡು ನೋಟಿಸ್ ನೀಡಿ ಬಿಡುಗಡೆಗೊಳಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ನಿಫಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸದಂತೆ ರಾಜ್ಯ ಸರ್ಕಾರ ಹಾಗೂ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದರು. ಹೀಗಿದ್ದರೂ ಸುಳ್ಳು ಸುದ್ದಿ ಹರಡಿದ ಹಿನ್ನಲೆಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.