
ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಚಾಮರಾಜನಗರ, ಬೆಂಗಳೂರಿನಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಶಂಕಿತ ಪ್ರಕರಣಗಳನ್ನು ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಬೇಕು. ಶಂಕಿತ ಪ್ರಕರಣಗಳ ಕುರಿತು ಕಚೇರಿಗೆ ಮಾಹಿತಿ ನೀಡಬೇಕು. ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ 10 ಹಾಸಿಗೆಯ ವಾರ್ಡ್ ಗಳನ್ನು ತೆರೆಯಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಚಾಮರಾಜನಗರದಲ್ಲಿಯೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಜಿಲ್ಲಾ ಆರೋಗ್ಯಾಧಿಕಾರಿ ಅಲರ್ಟ್ ಆಗಿರಲು ತಿಳಿಸಿದ್ದಾರೆ. ಗಡಿ ಭಾಗದ ಗ್ರಾಮಗಳಲ್ಲಿ ಆಶಾ ಕಾರ್ಯಕರ್ತೆಯರ ಮೂಲಕ ಪರೀಕ್ಷೆ ಮಾಡಬೇಕು. ಜ್ವರದಂತಹ ಲಕ್ಷಣ ಕಂಡುಬಂದರೆ ಕೂಡಲೇ ರಕ್ತದ ಮಾದರಿ ಪರೀಕ್ಷೆ ಮಾಡಬೇಕು ಎಂದು ಸೂಚಿಸಲಾಗಿದೆ.