ತಿರುವನಂತಪುರಂ: ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಾಲ್ವರಲ್ಲಿ ನಿಫಾ ವೈರಸ್ ದೃಢಪಟ್ಟಿದ್ದು ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಕೇರಳದಲ್ಲಿ ಪತ್ತೆಯಾಗಿರುವ ನಿಫಾ ವೈರಸ್ ಬಗ್ಗೆ ವಿಧಾನಸಭೆಯಲ್ಲಿ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ಕೇರಳದಲ್ಲಿ ಪ್ರಸ್ತುತ ಪತ್ತೆಯಾಗಿರುವ ನಿಫಾ ಸೋಂಕು ಬಾಂಗ್ಲಾದೇಶದಲ್ಲಿ ಕಂಡುಬಂದ ರೂಪಾಂತರ ತಳಿಯಾಗಿದ್ದು, ಅದು ಮನುಷ್ಯನಿಂದ ಮನುಷ್ಯನಿಗೆ ಹರಡುತ್ತದೆ ಎಂದು ತಿಳಿಸಿದ್ದಾರೆ.
ಅಲ್ಲದೇ ನಿಫಾ ವೈರಸ್ ಕಡಿಮೆ ಸಾಂಕ್ರಾಮಿಕವಾಗಿದ್ದರೂ ಹೆಚ್ಚಿನ ಮರಣ ಪ್ರಮಾಣವನ್ನು ಹೊಂದಿದೆ ಎಂದು ವಿವರಿಸಿದ್ದಾರೆ. ನಿಫಾ ವೈರಸ್ ಹರಡದಂತೆ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋಯಿಕ್ಕೋಡ್ ನ ಕೆಲವೆಡೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದರು.
ನಿಫಾ ರೋಗಿಗಳಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಮೊನೊಕ್ಲೋನಲ್ ಪ್ರತಿಕಾಯಗಳನ್ನು ಕಳುಹಿಸಲು ಇಂಡಿಅನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.