ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಕೃಷಿ ಕಾಯ್ದೆ ವಿರೋಧಿಸಿ, ನಡೆದಿದ್ದ ಪ್ರತಿಭಟನೆ ಸಮಯದಲ್ಲಿ ಪೊಲೀಸರ ಕ್ರಮದಿಂದಾಗಿ ಯಾವುದೇ ರೈತರು ಸಾವನ್ನಪ್ಪಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಚಳಿಗಾಲದ ಅಧಿವೇಶನದಲ್ಲಿ ಕೃಷಿ ಸಚಿವ ನರೇಂದ್ರ ತೋಮರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಕಾಯ್ದೆ ವಿರೋಧಿಸಿ ರೈತರು ಸುಮಾರು ಒಂದು ವರ್ಷಗಳ ಕಾಲ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಸುಮಾರು 700 ಜನ ಸಾವನ್ನಪ್ಪಿದ್ದರು ಎಂದು ರೈತರು ಹೇಳಿದ್ದರು. ಆದರೆ, ಕೇಂದ್ರ ಸರ್ಕಾರ ಮಾತ್ರ ಇದನ್ನು ನಿರಾಕರಿಸಿದೆ.
ಕಾಂಗ್ರೆಸ್ ಸಂಸದ ಧೀರಜ್ ಪ್ರಸಾದ್ ಸಾಹು ಹಾಗೂ ಎಎಪಿ ಸಂಸದ ಸಂಜಯ್ ಸಿಂಗ್ ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಭಟನೆಯಲ್ಲಿ ಯಾವುದೇ ರೈತರು ಸಾವನ್ನಪ್ಪಿಲ್ಲ. ರೈತರ ಕುಟುಂಬಗಳಿಗೆ ಪರಿಹಾರ ನೀಡುವುದು ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದ ವಿಷಯ ಎಂದು ಹೇಳಿದ್ದಾರೆ.
ರೈತರ ಹೋರಾಟದಿಂದಾಗಿ ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆದಿದೆ. ಅಲ್ಲದೇ, ರೈತರ ಹಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದೆ.