ಬೆಳಗಾವಿ: ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಎಂಬುದು ಜನರ ಆಸೆಯಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಗಿದೆ. ಕಂದಾಯ ಸಚಿವರು ಸಮರ್ಥವಾಗಿ ಉತ್ತರಗಳನ್ನು ನೀಡಿದ್ದಾರೆ. ಮಳೆಹಾನಿ, ಬೆಳೆ ಹಾನಿ ಪರಿಹಾರದ ಬಗ್ಗೆ ಸದನಕ್ಕೆ ಮಾಹಿತಿ ನೀಡಿದ್ದಾರೆ. ಸಕಾಲದಲ್ಲಿ ರೈತರಿಗೆ ನೆರವಾದ ಸರ್ಕಾರವೆಂದರೆ ಅದು ಬಿಜೆಪಿ ಸರ್ಕಾರವಾಗಿದೆ. ಸಂಕಷ್ಟಕ್ಕೆ ಸ್ಪಂದಿಸಿ ಸಕಾಲಕ್ಕೆ ರೈತರಿಗೆ ಪರಿಹಾರ ನೀಡಲಾಗಿದೆ. ಎರಡುಪಟ್ಟು ಪರಿಹಾರವನ್ನು ರೈತರಿಗೆ ನೀಡಲಾಗಿದೆ ಎಂದರು.
ಕನ್ನಡದ ಅಸ್ಮಿತೆಯನ್ನು ಎತ್ತಿ ಹಿಡಿಯುವ ಕೆಲಸವನ್ನು ನಾವು ಮಾಡಿದ್ದೇವೆ. ನಾಡು, ನುಡಿ, ಜಲದ ವಿಚಾರವಾಗಿ ನಾವೆಲ್ಲರೂ ಒಂದಾಗಿದ್ದೇವೆ. ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳಿಗೆ ಉತ್ತರ ಸಿಕ್ಕಿದೆ. ಉತ್ತರ ಕರ್ನಾಟಕಕ್ಕೆ ಸರ್ಕಾರ ಏನು ಮಾಡಬೇಕಿದೆಯೋ ಅದನ್ನು ಮಾಡುತ್ತದೆ. ಉತ್ತರ ಕರ್ನಾಟಕದ ಬಗ್ಗೆ ಕಾಂಗ್ರೆಸ್ ಗೆ ಪ್ರೀತಿ ಇಲ್ಲ ಎಂದು ಟೀಕಿಸಿದ್ದಾರೆ.
ಹಲವಾರು ಯೋಜನೆಗಳಿಗೆ ನಾವು ಅನುಮೋದನೆ ನೀಡಿದ್ದೇವೆ. ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷದ ದ್ವಂದ್ವ ನಿಲುವು ಗೊತ್ತಾಗಿದೆ. ಅಧಿಕಾರದಲ್ಲಿದ್ದಾಗ ಒಂದು ವಿಪಕ್ಷದಲ್ಲಿದ್ದಾಗ ಮತ್ತೊಂದು ನಿಲುವು ಅವರದ್ದಾಗಿದೆ. ಮುಂದಿನ ದಿನಗಳಲ್ಲಿ ಬೆಳಗಾವಿಯಲ್ಲಿ ಮೂಲಸೌಕರ್ಯಕ್ಕೆ ಒತ್ತು ನೀಡಲಾಗುವುದು. ಬಹುತೇಕವಾಗಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ವಿರೋಧಪಕ್ಷದವರು ಎಲ್ಲಾ ವಿಷಯದಲ್ಲಿಯೂ ಧರಣಿ ಮಾಡುತ್ತಾರೆ. ಉತ್ತರ ಕರ್ನಾಟಕ ಭಾಗಕ್ಕೆ ಏನು ಮಾಡುತ್ತಿದ್ದೇನೆ ಎಂದು ನನಗೆ ಗೊತ್ತಿದೆ. ಮಾತಿಗೆ ತಪ್ಪಿದ ಕಾಂಗ್ರೆಸ್ನಿಂದ ನೀತಿ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.