ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 29 ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, 90 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು 04 ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಒಟ್ಟು 123 ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.
2024-25ನೇ ಸಾಲಿನಲ್ಲಿ ಪ್ರವೇಶ ಪ್ರಕ್ರಿಯೆಗಾಗಿ ಅರ್ಹವಿರುವ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅಲ್ಪಸಂಖ್ಯಾತರ ನಿರ್ದೇಶನಾಲಯದ ವಿವಿಧ ಮಾದರಿಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರು ತಮ್ಮ ಅಧೀನದ ವಿವಿಧ ಮಾದರಿಯ ವಸತಿ ಶಾಲೆಗಳಲ್ಲಿ ಶೇ.100 ರಷ್ಟು ದಾಖಲಾತಿಯನ್ನು ಹೊಂದಲು ಜಿಲ್ಲಾ ಹಂತದಲ್ಲಿಯೇ ಪ್ರತ್ಯೇಕ ಪ್ರವೇಶಾತಿ ಅಧಿಸೂಚನೆ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು. ಸದರಿ ಅಧಿಸೂಚನೆಯ ಪತ್ರಿಕಾ ಪ್ರಕಟಣೆ ಹೊರಡಿಸಿ, ವ್ಯಾಪಕ ಪ್ರಚಾರ ಕೈಗೊಳ್ಳುವುದು. ನಿಯಾಮಾನುಸಾರ ಮೆರಿಟ್ ಹಾಗೂ ರೋಸ್ಟರ್ ಪದ್ಧತಿ ಪ್ರಕಾರ 6ನೇ ತರಗತಿಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ತಮ್ಮ ಅಧೀನದ ಅಧಿಕಾರಿ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿ ದಾಖಲಾತಿಪ್ರಕ್ರಿಯೆಯನ್ನು ಯಶಸ್ವಿಗೊಳಿಸುವುದು.
ಮುಂದುವರೆದು, ಅರ್ಜಿ ಸಲ್ಲಿಸುವ ವಿಧಾನ, ಪ್ರವೇಶ ಪರೀಕ್ಷೆಯ ಪ್ರಕ್ರಿಯೆ, ಮೀಸಲಾತಿ ವಿವರ, ವೇಳಾಪಟ್ಟಿ ಮತ್ತು ದಾಖಲಾತಿಗೆ ಸಂಬಂಧಿಸಿದ ಇತರೆ ವಿವರಗಳ ಸಂಪೂರ್ಣ ಮಾರ್ಗಸೂಚಿಗಳನ್ನು ಸದರಿ ಅಧಿಸೂಚನೆಯೊಂದಿಗೆ ಲಗತ್ತಿಸಲಾಗಿದ್ದು, ಅದರಂತೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು ಶೇ.100 ರಷ್ಟು ದಾಖಲಾತಿಯನ್ನು ಸಾಧಿಸಲು ಅಲ್ಪಸಂಖ್ಯಾತರ ನಿರ್ದೇಶನಾಲಯ ಕಚೇರಿ ಸುತ್ತೋಲೆ ಹೊರಡಿಸಿದೆ.
ಎಲ್ಲಾ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದು ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿರುತ್ತದೆ.
Website: https://sevasindhuservices.karnataka.gov.in
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕ: 16.02.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.03.2024
ದಾಖಲಾತಿ ಪ್ರಕ್ರಿಯೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಒದಗಿಸಲಾಗಿದ್ದು, ಪ್ರವೇಶ ಪರೀಕ್ಷೆ, ಆಯ್ಕೆಪಟ್ಟಿ ಮತ್ತು ಮುಂತಾದ ಪ್ರಕ್ರಿಯೆಗಳನ್ನು ನಿರ್ವಹಿಸಲು ನಿರ್ದೇಶನಾಲಯದಿಂದ ಪ್ರತ್ಯೇಕವಾಗಿ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ತಿಳಿಸಿದೆ.