ಬಿಹಾರದ ಜಮುಯಿ ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹರಿಸಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರನ್ನು ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಮುಯಿಯ ಮಹುಲಿಯಾ ತಾಂಡ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಪ್ರಭಾತ್ ರಂಜನ್ ಎಂದು ಗುರುತಿಸಲಾಗಿದೆ. ಸಿವಾನ್ ಜಿಲ್ಲೆಯ ನಿವಾಸಿಯಾಗಿರುವ ಅವರು ಗರ್ಹಿ ಪೊಲೀಸ್ ಠಾಣೆಯ ಉಸ್ತುವಾರಿ ವಹಿಸಿದ್ದರು. ಕೂಡಲೇ ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ನಡುವೆ ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಘಟನೆಯ ಬಗ್ಗೆ ತಿಳಿದು ಆಘಾತಕಾರಿ ಹೇಳಿಕೆ ನೀಡಿದ್ದಾರೆ.
ಇಂತಹ ಘಟನೆಗಳು ಹೊಸದೇನಲ್ಲ. ಇವುಗಳು ನಡೆಯುತ್ತಲೇ ಇರುತ್ತವೆ. ಈ ಹಿಂದೆಯೂ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಇಂತಹ ಘಟನೆಗಳು ನಡೆದಿವೆ. ಪ್ರಕರಣದ ಆರೋಪಿಗಳಿಗೆ ಕಾನೂನಿನ ಪ್ರಕಾರ ಶಿಕ್ಷೆ ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರಭಾತ್ ರಂಜನ್ ಅವರು 4 ವರ್ಷದ ಮಗಳು ಮತ್ತು 6 ತಿಂಗಳ ಗಂಡು ಮಗು ಅಗಲಿದ್ದಾರೆ. ನವಜಾತ ಶಿಶುವಿಗೆ ಜನ್ಮ ನೀಡಿದ ನಂತರ ಅವರ ಪತ್ನಿ ಪ್ರಸ್ತುತ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತ ಪೋಲೀಸರ ಇಡೀ ಕುಟುಂಬ ರಾಷ್ಟ್ರ ರಾಜಧಾನಿಯಲ್ಲಿ ನೆಲೆಸಿದೆ.
ಗಾಯಗೊಂಡ ಗೃಹರಕ್ಷಕನನ್ನು ರಾಜೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಅವರನ್ನು ಜಮುಯಿಯಲ್ಲಿರುವ ಖಾಸಗಿ ಕ್ಲಿನಿಕ್ಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಭಾಗಿಯಾಗಿದ್ದ ಮಿಥಿಲೇಶ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಜಮುಯಿ ಎಸ್ಪಿ ಶೌರ್ಯ ಸುಮನ್ ತಿಳಿಸಿದ್ದಾರೆ. ಆದರೆ ಟ್ರ್ಯಾಕ್ಟರ್ ಚಾಲಕ ಕೃಷ್ಣ ಎಂಬಾತ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಟ್ರ್ಯಾಕ್ಟರ್ ಅನ್ನು ವಶಪಡಿಸಿಕೊಂಡಿದ್ದು, ಚಾಲಕನನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.