ಧಾರವಾಡ: ಜಿಲ್ಲಾ ಪಂಚಾಯತ್ ವತಿಯಿಂದ ಧಾರವಾಡ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರ ಉದ್ಯೋಗ ಒದಗಿಸುವ ಉದ್ದೇಶದಿಂದ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಮಾರ್ಚ್ 15 ರಿಂದ 3 ತಿಂಗಳವರೆಗೆ “ದುಡಿಯೋಣ ಬಾ” ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ. ಸುಶೀಲಾ ತಿಳಿಸಿದ್ದಾರೆ.
ಗ್ರಾಮೀಣ ಜನರಿಗೆ ಬೇಸಿಗೆ ಅವಧಿಯಲ್ಲಿ ನಿರಂತರವಾಗಿ ಕೆಲಸ ಒದಗಿಸುವುದು, ಯೋಜನೆಯಿಂದ ಹೊರಗುಳಿದ ದುರ್ಬಲ ಕುಟುಂಬಗಳನ್ನು ಸಕ್ರೀಯವಾಗಿ ಭಾಗವಹಿಸುವಂತೆ ಮಾಡುವುದು, ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ನೀಡಿ ಸ್ವಾವಲಂಬಿಗಳಾಗಿ ಬದುಕುವಂತೆ ಮಾಡುವುದು, ಕೆಲಸ ಅಥವಾ ಕಾಮಗಾರಿ ಬೇಡಿಕೆ ಸಲ್ಲಿಸುವ ವಿಧಾನವನ್ನು ಸರಳಗೊಳಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶಗಳಾಗಿವೆ ಎಂದು ತಿಳಿಸಿದ್ದಾರೆ.
ಈ ಅಭಿಯಾನದ ಅವಧಿಯಲ್ಲಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕನಿಷ್ಠ 50 ರೈತರ ಜಮೀನುಗಳಲ್ಲಿ ಬದು, ಕೃಷಿ ಹೊಂಡ, ತೆರೆದ ಬಾವಿ ನಿರ್ಮಾಣ, ಪ್ರತಿ ಗ್ರಾಮ ಪಂಚಾಯತಿಗೆ ಕನಿಷ್ಠ 50 ಇಂಗುಗುಂಡಿ ನಿರ್ಮಾಣ, ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಕೆರೆಗೆ ನೀರು ಹರಿದು ಬರುವ ಕಾಲುವೆಗಳ ಪುನಶ್ಚೇತನ, ಕೆರೆ ಹೂಳು ತೆಗೆಯುವುದು, ಕೆರೆ ಏರಿ ಮತ್ತು ಕೋಡಿ ದುರಸ್ತಿ, ರೈತರ ಜಮೀನುಗಳಿಗೆ ನೀರು ಹರಿದು ಹೋಗುವ ಕಾಲುವೆಗಳ ಪುನಶ್ಚೇತನ ಮತ್ತು ಕೆರೆ ಅಂಚಿನಲ್ಲಿ ಅರಣ್ಯೀಕರಣ ಮತ್ತು ರಸ್ತೆ ಬದಿ ನೆಡುತೋಪು, ಬ್ಲಾಕ್ ಪ್ಲಾಂಟೇಶನ್, ಕೃಷಿ ಅರಣ್ಯೀಕರಣ, ರೈತರ ಜಮೀನುಗಳಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಮುಂಗಡ ಗುಂಡಿ ತೆಗೆಯುವ ಹಾಗೂ ಬೋರ್‍ವೆಲ್ ರಿಚಾರ್ಚ್ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಲಾಗಿದೆ.