ಪ್ರವಾದಿ ಮಹಮ್ಮದ್ ಅವರ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪೂರ್ ಶರ್ಮ ಅವರನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಎಂಬವರನ್ನು ಮುಸ್ಲಿಂ ಮೂಲಭೂತವಾದಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಅಲ್ಲದೆ ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ತಮ್ಮ ಪೈಶಾಚಿಕತೆ ಮೆರೆದಿದ್ದಾರೆ.
ಈ ಹತ್ಯೆಯನ್ನು ಖಂಡಿಸಿ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಮಧ್ಯೆ ಪಶ್ಚಿಮ ಬಂಗಾಳದಲ್ಲಿ ತೃಣ ಮೂಲ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಫೇಕ್ ವಿಡಿಯೋಗಳನ್ನು ಹರಿಬಿಡುವ ಮೂಲಕ ಕೋಮು ಗಲಭೆಯನ್ನು ನಡೆಸಲು ಸಂಚು ನಡೆಸಿದೆ ಎಂದು ಅವರು ಆರೋಪಿಸಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ಪ್ರವಾದಿ ಮಹಮ್ಮದ್ ವಿರುದ್ಧ ಹೇಳಿಕೆ ನೀಡಿದ ನೂಪುರ್ ಶರ್ಮಾ ಅವರನ್ನು ಬಂಧಿಸದೆ ಕೇಂದ್ರ ಸರ್ಕಾರ ಭದ್ರತೆ ನೀಡಿದೆ. ಆಕೆಯ ವಿರುದ್ಧ ಪಶ್ಚಿಮ ಬಂಗಾಳದಲ್ಲೂ ಪ್ರಕರಣ ದಾಖಲಾಗಿದ್ದು, ಕಾನೂನು ಕಟೆಕಟೆಗೆ ತರದೆ ಬಿಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಯಾರ ಹೆಸರನ್ನು ಉಲ್ಲೇಖಿಸದೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.