
ಕೀರ್ತಿ ಚಕ್ರ ವಿಜೇತ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ಬಗ್ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಈ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ಜನರನ್ನು ಬೆಚ್ಚಿ ಬೀಳಿಸಿದೆ. ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಳಕೆದಾರರು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಮಹಿಳಾ ಆಯೋಗ ಸಹ ಅಸಭ್ಯ ಕಾಮೆಂಟ್ ವಿರುದ್ಧ ತಿರುಗಿಬಿದ್ದಿದೆ. ದೆಹಲಿಯ ನಿವಾಸಿ ಅಹ್ಮದ್ ಕೆ, ಫೋಟೋಕ್ಕೆ ಅಸಭ್ಯ ಮತ್ತು ಅವಹೇಳನಕಾರಿ ಕಾಮೆಂಟ್ ಮಾಡಿದ್ದು, ಸ್ಕ್ರೀನ್‌ಶಾಟ್ ಅನ್ನು ರಾಷ್ಟ್ರೀಯ ಮಹಿಳಾ ಆಯೋಗ ಹಂಚಿಕೊಂಡಿದೆ. ವ್ಯಕ್ತಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಮಹಿಳಾ ಆಯೋಗ ಪತ್ರ ಬರೆದಿದೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಮೃತಿ ಸಿಂಗ್, ಪತಿಗೆ ಸಿಕ್ಕ ಕೀರ್ತಿ ಚಕ್ರ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಈ ಫೋಟೋಕ್ಕೆ ವ್ಯಕ್ತಿಯೊಬ್ಬ ಕೆಟ್ಟದಾಗಿ ಕಮೆಂಟ್ ಮಾಡಿದ್ದಾನೆ.
ಸಿಯಾಚಿನ್ ಗ್ಲೇಸಿಯರ್‌ನಲ್ಲಿರುವ ಭಾರತೀಯ ಸೇನಾ ಶಿಬಿರದಲ್ಲಿ ತನ್ನ ಸಹೋದ್ಯೋಗಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಾಗ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಹುತಾತ್ಮರಾಗಿದ್ದರು. ಕ್ಯಾಪ್ಟನ್ ಸಿಂಗ್ ಅವರಿಗೆ ಮರಣೋತ್ತರವಾಗಿ ನೀಡಲಾದ ಈ ಪ್ರಶಸ್ತಿಯನ್ನು ಅವರ ಪತ್ನಿ ಸ್ಮೃತಿ ಮತ್ತು ತಾಯಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸ್ವೀಕರಿಸಿದರು.