ಒಡಿಶಾದ ನಯಾಗಢದಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಮಹಿಳೆಯರು ಸೇರಿ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಬಾಬು ಪರಿದಾ ಪ್ರಮುಖ ಆರೋಪಿಯಾಗಿದ್ದಾನೆ. ಮೂರು ತಿಂಗಳ ಹಿಂದೆ ಸಂತ್ರಸ್ಥೆಯನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯವೆಸಗಿದ್ದು, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಲ್ಲದೇ, ಬಾಲಕಿ ಮೇಲೆ ಹಲವು ಬಾರಿ ಹಲ್ಲೆ ನಡೆಸಿದ್ದ.
ಕಳೆದ ಮಾರ್ಚ್ 31 ರಂದು ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಇದರಿಂದ ಆಕ್ರೋಶಗೊಂಡ ಆರೋಪಿ ಕಡೆಯವರು ಬಾಲಕಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ. ಬಾಲಕಿ ತಾಯಿಯ ಮೇಲೆಯೂ ಹಲ್ಲೆ ಮಾಡಿದ್ದು, ಮಾಹಿತಿ ತಿಳಿದ ಪೊಲೀಸರು ಬಾಲಕಿ ಮತ್ತು ಆಕೆಯ ತಾಯಿಯನ್ನು ರಕ್ಷಿಸಿದ್ದಾರೆ. ಅಲ್ಲದೇ, ಐವರು ಮಹಿಳೆಯರು, ಪ್ರಮುಖ ಆರೋಪಿ ಬಾಬು ಸೇರಿದಂತೆ 7 ಮಂದಿಯನ್ನು ಬಂಧಿಸಿದ್ದಾರೆ.