ಮಂಗಳೂರು: ಕಾರ್ಖಾನೆಗಳ ಮಾಲೀಕರಿಂದ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 4 ಲಕ್ಷ ರೂಪಾಯಿ ದಂಡ ವಿಧಿಸಿ ದಕ್ಷಿಣ ಕನ್ನಡ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ಮತ್ತು ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾರ್ಖಾನೆಗಳ ಮಾಲೀಕರಿಂದ ಲಂಚ ಪಡೆದು ಸಿಕ್ಕಿಬಿದ್ದಿದ್ದ ಕಾರ್ಖಾನೆಗಳ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಸುರೇಶ್ ಶಿಕ್ಷೆಗೊಳಗಾದವರು.
ಪ್ರಸ್ತುತ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು 2016ರಲ್ಲಿ ಲಂಚದ ಹಣದ ಸಮೇತ ಭ್ರಷ್ಟಾಚಾರ ನಿಗ್ರಹದಳಕ್ಕೆ ಸಿಕ್ಕಿ ಬಿದ್ದಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ದಂಡ ಕಟ್ಟಲು ವಿಫಲವಾದರೆ ಮತ್ತೆ ಆರು ತಿಂಗಳು ಸಾದಾ ಸಜೆ ಅನುಭವಿಸಬೇಕು ಎಂದು ಆದೇಶಿಸಿದೆ.
ಕಾರ್ಖಾನೆಗಳು, ಬಾಯ್ಲರ್ ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ಮಂಗಳೂರು ಉಪವಿಭಾಗ 2ರಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಸುರೇಶ್ ಕೊಟ್ಟಾರಾದ ಕಚೇರಿಯಲ್ಲಿ ನಿರ್ವಹಿಸುವ ಸಂದರ್ಭದಲ್ಲಿ ಕಾರ್ಖಾನೆಗಳಿಗೆ ಪರವಾನಿಗೆ ಮತ್ತು ಪರವಾನಿಗೆ ನವೀಕರಣಕ್ಕೆ ನಿರಾಕ್ಷೇಪಣಾ ಪತ್ರ ನೀಡಲು ಲಂಚಕ್ಕಾಗಿ ಪೀಡಿಸುತ್ತಿದ್ದ ಬಗ್ಗೆ ದೂರು ದಾಖಲಾಗಿತ್ತು. 2016ರ ನವೆಂಬರ್ 30ರಂದು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದಾಗ 3.49 ಲಕ್ಷ ರೂ. ನಗದು ಪತ್ತೆಯಾಗಿತ್ತು. ತನಿಖೆ ನಡೆಸಿದ ಎಸಿಬಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಎಸಿಬಿ ಹಾಗೂ ಲೋಕಾಯುಕ್ತ ಪರವಾಗಿ ರವೀಂದ್ರ ಮುನ್ನಿಪಾಡಿ ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.