ಬೆಂಗಳೂರು: ಓಲಾ, ಉಬರ್ ಆಟೋ ಸೇವೆಗೆ ಶೇಕಡ 5ರಷ್ಟು ಸೇವಾ ಶುಲ್ಕ ನಿಗದಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದ ಓಲಾ, ಉಬರ್ ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಆದೇಶ ನೀಡಿದೆ.
ಆಪ್ ಆಧರಿತ ಆಟೋರಿಕ್ಷಾ ಸೇವೆ ಒದಗಿಸುತ್ತಿರುವ ಕಂಪನಿಗಳು ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇಕಡ 5ರಷ್ಟು ಸೇವಾ ಶುಲ್ಕ ಮತ್ತು ಅನ್ವಯಿಸುವ ಜಿಎಸ್‌ಟಿ ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಬೇಕು ಎಂದು ನಿರ್ದೇಶಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಪುರಸ್ಕರಿಸಿದೆ.
ರಾಜ್ಯ ಸಾರಿಗೆ ಇಲಾಖೆ ವತಿಯಿಂದ 2022ರ ನವೆಂಬರ್ 25 ರಂದು ಈ ಕುರಿತಾಗಿ ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಅಗ್ರಿಗೇಟರ್ ಸಂಸ್ಥೆಗಳಾದ ಓಲಾ ಮತ್ತು ಉಬರ್ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ ವಜಾಗೊಳಿಸಿ ಆದೇಶ ನೀಡಿದೆ.
ಸಾರಿಗೆ ಇಲಾಖೆ ನಿಗದಿಪಡಿಸಿದ ದರದ ಮೇಲೆ ಓಲಾ ಮತ್ತು ಉಬರ್ ಶೇಕಡ 5ರಷ್ಟು ಸೇವಾ ಶುಲ್ಕ ಸಂಗ್ರಹಿಸಲು ಅರ್ಹರು ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.