ಬೆಂಗಳೂರು : ಹಳೆ ಪಿಂಚಣಿ ಯೋಜನೆ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯದ ಸರ್ಕಾರಿ ಶಾಲೆ ಶಿಕ್ಷಕರನ್ನು ಹಳೆ ಪಿಂಚಣಿ ವ್ಯವಸ್ಥೆಗೆ ಸೇರ್ಪಡೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವಂತೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ನಿರ್ದೇಶನ ನೀಡಲಾಗಿದೆ.
ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ ಸಲ್ಲಿಸಿ, ಸರ್ಕಾರಿ ಸೇವೆಯಲ್ಲಿರುವ ಶಿಕ್ಷಕರ ನಿವೃತ್ತಿಯ ಜೀವನಕ್ಕೆ ಭದ್ರತೆ ನೀಡಬೇಕು. ಮಾಸಿಕ ಕನಿಷ್ಠ ಪಿಂಚಣಿ ಇಲ್ಲದೆ ಶಿಕ್ಷಕರ ನೇವೃತ್ತಿ ಜೀವನ ಕಷ್ಟವಾಗುತ್ತದೆ. ಅವರಿಗೆ ನ್ಯಾಯ ಕೊಡಿಸುವ ದೃಷ್ಟಿಯಿಂದ ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ವ್ಯವಸ್ಥೆ ತರಬೇಕು ಎಂದು ಮನವಿ ಸಲ್ಲಿಸಲಾಗಿತ್ತು.
ಮುಖ್ಯಮಂತ್ರಿಗಳ ನಿರ್ದೇಶನದ ಅನ್ವಯ ಸಂಘದ ಕೋರಿಕೆಯನ್ನು ಪರಿಶೀಲಿಸಿ ನಿಯಮಾನಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ. ರಾಮಯ್ಯ ಅವರು ಹಣಕಾಸು ಇಲಾಖೆಗೆ ಪತ್ರ ಬರೆದು ಸರ್ಕಾರಿ ಶಾಲಾ ಶಿಕ್ಷಕರನ್ನು ಹಳೆ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವ ಬಗ್ಗೆ ಪರಿಶೀಲನೆ ನಡೆಸುವಂತೆ ತಿಳಿಸಿದ್ದಾರೆ.