ಚೆನ್ನೈ: ನಿವಾರ್ ಚಂಡಮಾರುತ ತಮಿಳುನಾಡು ಕರಾವಳಿಯಲ್ಲಿ ಅಬ್ಬರಿಸಿದ ಬೆನ್ನಲ್ಲೇ ಮತ್ತೊಂದು ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಸೋಮವಾರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗಲಿದ್ದು, ಡಿಸೆಂಬರ್ 2 ಮತ್ತು 3 ರಂದು ದಕ್ಷಿಣ ತಮಿಳುನಾಡು ಮತ್ತು ಕೇರಳ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕನ್ಯಾಕುಮಾರಿ ತೀರ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಇದರ ಪರಿಣಾಮ ತಮಿಳುನಾಡು, ಕೇರಳ, ಪಾಂಡಿಚೇರಿ, ಆಂಧ್ರಪ್ರದೇಶದ ಕರಾವಳಿ ಭಾಗ ಸೇರಿದಂತೆ ಹಲವು ಪ್ರದೇಶದಲ್ಲಿ ಭಾರೀ ಮಳೆಯಾಗಬಹುದು ಎಂದು ಹೇಳಲಾಗಿದೆ.
ಡಿಸೆಂಬರ್ 2 ಮತ್ತು 3 ರಂದು ಅನೇಕ ಭಾಗದಲ್ಲಿ ಮಳೆ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸಮುದ್ರದ ಉಬ್ಬರ ತೀವ್ರಗೊಳ್ಳಲಿದೆ. ಗಂಟೆಗೆ ಸುಮಾರು 65 ಕಿಲೋಮೀಟರ್ ವೇಗದ ಗಾಳಿ ಬೀಸಲಿದ್ದು, ಡಿಸೆಂಬರ್ 4 ರ ವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ.