ಗುಜರಾತ್ ವಿಧಾನಸಭಾ ಚುನಾವಣೆಗೆ ಡಿಸೆಂಬರ್ 1 ಹಾಗೂ ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಹೊರಬೀಳಲಿದೆ. ಮತ್ತೊಮ್ಮೆ ಅಧಿಕಾರದ ಗದ್ದುಗೆಗೇರಲು ಆಡಳಿತರೂಢ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದೆ.
ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳು ಸಹ ಬಿರುಸಿನ ಪ್ರಚಾರ ಕಾರ್ಯ ಕೈಗೊಂಡಿದ್ದು, ಮತದಾರ ಯಾರಿಗೆ ಮಣೆ ಹಾಕಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಗುಜರಾತ್ ವಿಧಾನಸಭೆಯ 182 ಕ್ಷೇತ್ರಗಳಲ್ಲಿ ಒಟ್ಟು 1,621 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗಿಳಿದಿದ್ದು, ಡಿಸೆಂಬರ್ 8ರಂದು ಇವರುಗಳ ಭವಿಷ್ಯ ನಿರ್ಧಾರವಾಗಲಿದೆ.
ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಮಹಿಳೆಯರ ಸಂಖ್ಯೆ ಕೇವಲ 139. ಈ ಪೈಕಿ ಬಿಜೆಪಿ 18 ಮಹಿಳೆಯರಿಗೆ ಟಿಕೆಟ್ ನೀಡಿದ್ದರೆ, ಕಾಂಗ್ರೆಸ್ 14 ಮಹಿಳೆಯರನ್ನು ಕಣಕ್ಕಿಳಿಸಿದೆ. ಆಮ್ ಆದ್ಮಿ ಪಕ್ಷ 6 ಮಹಿಳೆಯರಿಗೆ ಟಿಕೆಟ್ ನೀಡಿದ್ದು, 56 ಮಹಿಳೆಯರು ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಮಹಿಳೆಯರ ಸಂಖ್ಯೆ ಕೊಂಚ ಜಾಸ್ತಿ ಇದೆ.