ಬೆಂಗಳೂರು: ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಆಧರಿಸಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿ ಬಿಬಿಎಂಪಿ ಆದೇಶಿಸಿದೆ.
ಪಟಾಕಿ ಬಳಕೆ ಕುರಿತಂತೆ ಸುಪ್ರೀಂಕೋರ್ಟ್ ಸೂಚನೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ನಿರ್ಬಂಧ ವಿಧಿಸಲಾಗಿದೆ. ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಲಾಗಿದೆ.
ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಬೇಕು. ನಿಷೇಧಿತ ಪಟಾಕಿ ಮಾರಾಟ, ದಾಸ್ತಾನು ಕಂಡು ಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದೆ.