
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗರನ್ನು ಆತಂಕಕ್ಕೀಡು ಮಾಡಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಬಲೆಗೆ ಬಿದ್ದಿದೆ. ಮೂರು ದಿನಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೊಮ್ಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪಾಳುಬಿದ್ದ ಕಟ್ಟಡದಲ್ಲಿ ಅವಿತು ಕುಳಿತಿದ್ದ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸಪಟ್ಟಿದ್ದರು. ಇಂದು ಬೆಳಿಗ್ಗೆ ಚಿರತೆ ಸೆರೆ ಹಿಡಿಯಲು ಮುಂದಾಗಿದ್ದ ವೇಳೆ ಇಬ್ಬರು ಸಿಬ್ಬಂದಿಗಳ ಮೇಲೆ ಚಿರತೆ ದಾಳಿ ನಡೆಸಿತ್ತು. ಡಾ.ಕಿರಣ್ ಹಾಗೂ ಶಾರ್ಪ್ ಶೂಟರ್ ಧನರಾಜ್ ಎಂಬುವವರು ಚಿರತೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಅರವಳಿಕೆ ಮದ್ದು ನೀಡಿದ್ದರೂ ಚಿರತೆ ಬೋನಿಗೆ ಬಿದ್ದಿರಲಿಲ್ಲ. ಬಳಿಕ ಆಪರೇಷನ್ ಚಿರತೆ ಕಾರ್ಯಾಚರಣೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು ಪಟಾಕಿಗಳನ್ನು ಸಿಡಿಸುವ ಮೂಲಕ ಚಿರತೆಯನ್ನು ಬೆನ್ನಟ್ಟಿದ್ದರು. ಈ ವೇಳೆ ಅರಣ್ಯ ಇಲಾಖೆಯ ಬಲೆಗೆ ಚಿರತೆ ಬಿದ್ದಿದೆ. ಬೆಂಗಳೂರಿನ ಬೊಮ್ಮನಹಳ್ಳಿ, ಕೂಡ್ಲು ಪ್ರದೇಶದಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದ್ದು, ಸಿಲಿಕಾನ್ ಸಿಟಿ ಜನರು ನಿಟ್ಟುಸಿರು ಬಿಟ್ಟಿದ್ದಾರೆ.