ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಶಿಫಾರಸ್ಸು ಜಾರಿ, ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿರುವ ಸರ್ಕಾರಿ ನೌಕರರ ಸಂಘ, ಇವುಗಳನ್ನು ಕಾರ್ಯಗತಗೊಳಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವ ಕುರಿತಂತೆ ಭಾನುವಾರದಂದು, ಚಿಕ್ಕಮಗಳೂರಿನಲ್ಲಿ ನಡೆದ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಸಂಘದ ಅಧ್ಯಕ್ಷ ಷಡಾಕ್ಷರಿ ನೇತೃತ್ವದಲ್ಲಿ ಚಿಕ್ಕಮಗಳೂರು ನಗರದ ಸೀತಾ ದಯಾನಂದ ಪೈ ಕಲ್ಯಾಣ ಮಂಟಪದಲ್ಲಿ ಈ ಕಾರ್ಯಕಾರಣಿ ಸಭೆ ನಡೆದಿದ್ದು, ತಮ್ಮ ಬೇಡಿಕೆಗಳ ಹೋರಾಟದ ಮೊದಲ ಹಂತವಾಗಿ ಜುಲೈ 8 ರಿಂದ 14ರ ವರೆಗೆ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಬಳಿಕ ಬೆಂಗಳೂರಿನಲ್ಲಿ ಮತ್ತೊಮ್ಮೆ ರಾಜ್ಯ ಕಾರ್ಯಕಾರಣಿ ಸಭೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ.
ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಲು ಸ್ಪಂದಿಸದಿದ್ದರೆ ಜುಲೈ ಅಂತ್ಯದಲ್ಲಿ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ಭಾನುವಾರ ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಅಲ್ಲದೆ ‘ಆರೋಗ್ಯ ಸಂಜೀವಿನಿ’ ಯೋಜನೆಯನ್ನು ಜಾರಿಗೊಳಿಸಲು ಸಹ ಭಾನುವಾರದ ಸಭೆಯಲ್ಲಿ ಒತ್ತಾಯಿಸಲಾಗಿದೆ.