
ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ನೀಡಿದ ಭರವಸೆಯಂತೆ ಹಳೆ ಪಿಂಚಣಿ ಯೋಜನೆ ಜಾರಿಗೆ ಬದ್ಧವಾಗಿದ್ದೇವೆ. ಈ ಬಗ್ಗೆ ಯಾವುದೇ ಅನುಮಾನ ಬೇಡ, ತಡವಾದರೂ ಕೂಡ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡ ಅವರ ಪ್ರಶ್ನೆಗೆ ಸಭಾನಾಯಕ ಎನ್.ಎಸ್. ಬೋಸರಾಜು ಅವರು ಉತ್ತರಿಸುವ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಪರಮೇಶ್ವರ್ ತಡವಾಗಿಯಾದರೂ ಹಳೆ ಪಿಂಚಣಿ ಪದ್ಧತಿ ಜಾರಿ ಖಚಿತವೆಂದು ಭರವಸೆ ನೀಡಿದ್ದಾರೆ.
ಹಳೆ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೇ ನೀಡಿದ್ದ ಭರವಸೆಗೆ ಬದ್ಧವಾಗಿದ್ದೇವೆ. ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದ್ದು, ಇಂದಲ್ಲ ನಾಳೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಸಭಾನಾಯಕ ಎನ್.ಎಸ್. ಬೋಸರಾಜು, ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಪರಿಶೀಲಿಸಲು ಸಮಿತಿ ರಚಿಸಲಾಗಿದೆ. ಎರಡು ಸಭೆಗಳು ನಡೆದಿದ್ದು, ಈ ಸಮಿತಿಗೆ ಹಳೆಪಿಂಚಣಿ ಯೋಜನೆ ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಯೋಜನೆ ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡ ಕ್ರಮದ ಅಧ್ಯಯನ ನಡೆಸಿ ವರದಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.