ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೆ ಪಿಂಚಣಿ ಯೋಜನೆ ಜಾರಿ ಮಾಡುವ ವಿಚಾರ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭಾಗವಾಗಿರುತ್ತದೆ ಎಂದು ಹೇಳಿದ್ದಾರೆ.
ಎರಡು ದಿನಗಳಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದು, ಕಲ್ಯಾಣ ಕರ್ನಾಟಕ, ಕರಾವಳಿ, ಮಲೆನಾಡು, ಬೆಂಗಳೂರು, ಕಿತ್ತೂರು ಕರ್ನಾಟಕ ಭಾಗಗಳಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
200 ಯೂನಿಟ್ ವರೆಗೆ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ತಿಂಗಳಿಗೆ 2000 ರೂ., ಬಿಪಿಎಲ್ ಕುಟುಂಬಗಳ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆಜಿ ಅಕ್ಕಿ, ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್, ನಿರುದ್ಯೋಗಿ ಯುವ ಜನರಿಗೆ ನಿರುದ್ಯೋಗ ಭತ್ಯೆ ಘೋಷಣೆಗಳು ಪ್ರಣಾಳಿಕೆಯಲ್ಲಿ ಇರುತ್ತವೆ. ಸರ್ಕಾರಿ ನೌಕರರಿಗೆ ಒಪಿಎಸ್ ಜಾರಿ ಮಾಡುವ ವಿಚಾರವೂ ಕಾಂಗ್ರೆಸ್ ಪ್ರಣಾಳಿಕೆಯ ಭಾಗವಾಗಿರುತ್ತದೆ ಎಂದು ಹೇಳಿದ್ದಾರೆ.