ಚಿಕ್ಕಮಗಳೂರು : ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ ಎಂದು ಚಿಕ್ಕಮಗಳೂರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳೊಂದಿಗೆ ಉದ್ಘಾಟಿಸಿ ಮಾತನಾಡಿದರು.
ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಕೂಡ ಅಷ್ಟೇಮುಖ್ಯ. ಅದೇ ರೀತಿ ಕಾಂಗ್ರೆಸ್ ಪಕ್ಷದ ಮೇಲೆ ಕನ್ನಡಿಗರು ನಂಬಿಕೆ ಇಟ್ಟು ಮತ ನೀಡಿದ್ದಾರೆ. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಆ ನಂಬಿಕೆ ಉಳಿಸಿಕೊಂಡಿದ್ದೇವೆ. ಇಂದು ಚಿಕ್ಕಮಗಳೂರಿನಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನಮ್ಮ ಆದ್ಯತೆಯಾಗಿದೆ. ನಮ್ಮ ಸರ್ಕಾರ ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ ಹೊಸ ಬದಲಾವಣೆಯನ್ನು ತಂದಿದ್ದು, ಇದರಿಂದ ಜನರ ಬದುಕು ಸುಧಾರಿಸಿದೆ. ರಾಜ್ಯದ ಜನತೆಯ ಆಶೀರ್ವಾದ ಹಾಗೂ ಸಹಕಾರದಿಂದ ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದ್ದು, ಜನಪರ ಆಡಳಿತ ನೀಡಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.