ಕೇರಳದ ಕಾಸರಗೋಡಿನ ದೇವಸ್ಥಾನದ ಉತ್ಸವದಲ್ಲಿ ಪಟಾಕಿ ಅವಘಡದಲ್ಲಿ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಸೋಮವಾರ ತಡರಾತ್ರಿ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಬಳಿ ದೇವಸ್ಥಾನದ ಉತ್ಸವದಲ್ಲಿ ಪಟಾಕಿ ಸಿಡಿಸುವ ವೇಳೆ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಗಾಯಗೊಂಡವರಲ್ಲಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ ವೀರರ್ಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರಕ್ಕೆ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಅವಘಡ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಸಂತ್ರಸ್ತರನ್ನು ರಕ್ಷಣೆ, ಪರಿಹಾರ ಒದಗಿಸಲು ತ್ವರಿತ ಕ್ರಮ ಕೈಗೊಂಡಿದ್ದಾರೆ.