ರಾಷ್ಟ್ರ ರಾಜಧಾನಿಯಲ್ಲಿ ಕೊರೋನ ವೈರಸ್ ದಿನೇದಿನೇ ಉಲ್ಬಣವಾಗ್ತಿದೆ. ಹೀಗಿರುವಾಗ ಕ್ರೈಮ್ ಬ್ರಾಂಚ್ ನ ಹೆಚ್ಚುವರಿ ಪೊಲೀಸ್ ಕಮಿಷನರ್ ಸೇರಿದಂತೆ 300 ಕ್ಕೂ ಹೆಚ್ಚು ದೆಹಲಿ ಪೊಲೀಸ್ ಸಿಬ್ಬಂದಿ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿದು ಬಂದಿದೆ. ಹೌದು, 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದೆ. ಅವರು ವಿವಿಧ ಘಟಕಗಳಿಗೆ ಸೇರಿದ್ದು, ಸೋಂಕು ದೃಢವಾದ ಮೇಲೆ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಪೊಲೀಸರ ಒಟ್ಟು ಸಾಮರ್ಥ್ಯ 80,000 ಕ್ಕೂ ಹೆಚ್ಚಿದೆ. ಇತ್ತೀಚೆಗೆ, ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಅವರು ಪೊಲೀಸ್ ಸಿಬ್ಬಂದಿಗಳಲ್ಲಿ ವೈರಸ್ ಹರಡುವುದನ್ನು ತಡೆಗಟ್ಟಲು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಅನ್ನು ಹೊರಡಿಸಿದ್ದರು. ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕರ ಮಧ್ಯೆ ತಮ್ಮ ಕರ್ತವ್ಯವನ್ನು ನಿರ್ವಹಿಸುವ ಮುಂಚೂಣಿಯ ಕೆಲಸಗಾರರಾಗಿರುವುದರಿಂದ, ಅವರಿಗೆ ಸೋಂಕು ಸುಲಭವಾಗಿ ತಗುಲುತ್ತದೆ. ಹೀಗಾಗಿ ಪೊಲೀಸರು, ತಮ್ಮನ್ನು ರಕ್ಷಿಸಿಕೊಳ್ಳಲು ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಕಡ್ಡಾಯ ಎಂದು ಎಸ್ಒಪಿಯಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೇ, ಎಲ್ಲಾ ಪೊಲೀಸ್ ಸಿಬ್ಬಂದಿ ಫೇಸ್-ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಮತ್ತು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಾಗ ಸರಿಯಾದ ನೈರ್ಮಲ್ಯವನ್ನು ಅಭ್ಯಾಸ ಮಾಡಬೇಕು. ಲಸಿಕೆ ಹಾಕಿಸಿಕೊಳ್ಳದ ಎಲ್ಲಾ ಪೊಲೀಸ್ ಸಿಬ್ಬಂದಿ ಮತ್ತು ಕುಟುಂಬದ ಅರ್ಹ ಸದಸ್ಯರು ಲಸಿಕೆ ಹಾಕಿಸಿಕೊಳ್ಳಬೇಕು. ವೈದ್ಯಕೀಯ ಕಾರಣಗಳಿಂದ ಲಸಿಕೆಯನ್ನು ಪಡೆಯದಿರುವವರು, ಮತ್ತೊಮ್ಮೆ ವೈದ್ಯಕೀಯ ಅಭಿಪ್ರಾಯವನ್ನು ಪಡೆಯಬೇಕು ಎಂದು ಎಸ್ಒಪಿ ಅಲ್ಲಿ ತಿಳಿಸಲಾಗಿದೆ.