ಬಾಗಲಕೋಟೆ: 2ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಸಮುದಾಯದ ಮುಖಂಡರಿಗೆ ಬೆದರಿಕೆ ಹಾಕುವ ಕೆಲಸ ಈ ಸರ್ಕಾರದಲ್ಲಿ ಮಾಡಲಾಗುತ್ತಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಪಂಚಮಸಾಲಿ ಮುಖಂಡರಿಗೆ ಕರೆ ಮಾಡಿ ಬೆದರಿಕೆ ಹಾಕಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ನಮಗೆ ಬೆದರಿಕೆ ಹಾಕುವ ಕೆಲಸ ನಡೆಯುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಪಂಚಮಸಾಲಿ ತಾಲೂಕು ಘಟಕದ ಅಧ್ಯಕ್ಷರು, ಜಿಲ್ಲಾ ಘಟಕದ ಅಧ್ಯಕ್ಷರಿಗೆ ಕರೆ ಮಾಡಿ ಕೆಲವರು ಬೆದರಿಕೆ ಹಾಕುತ್ತಿದ್ದಾರೆ. ಬೆದರಿಕೆ ಕರೆಗಳಿಂದ ಏನಾದರೂ ಆದರೆ ರಕ್ತ ಕ್ರಾಂತಿ ಆಗುತ್ತದೆ ಎಂದು ಸ್ವಾಮೀಜಿ ಎಚ್ಚರಿಸಿದ್ದಾರೆ.
ಈ ಹಿಂದೆ ಬಸವರಾಜ್ ಬೊಮ್ಮಾಯಿ ಸರ್ಕಾರ ಇದ್ದಾಗ ಅವರ ಮನೆ ಮುಂದೆ ಹೋರಾಟ ಮಾಡಿದ್ದೆವು. ಆದರೂ ನಮ್ಮ ಮೇಲೆ ಒಂದು ಕೇಸ್ ಸಹ ದಾಖಲಾಗಿರಲಿಲ್ಲ. ಆದರೆ ಈಗ ಸಿದ್ದರಾಮಯ್ಯ ಸರ್ಕಾರದಲ್ಲಿ ಬೆದರಿಕೆ ಹಾಕಲಾಗುತ್ತಿದೆ. ಬೆದರಿಕೆ ಕರೆಗಳ ಹಿಂದೆ ಶಾಸಕರು, ಸಂಸದರು ಇದ್ದರೂ ಸುಮ್ಮನೇ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.