ದಾವಣಗೆರೆ: ಲೋಕಸಭಾ ಚುನಾವಣೆಗೂ ಮುನ್ನವೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಕಳೆದ ಆರು ವರ್ಷಗಳಿಂದ ಮೀಸಲಾತಿಗಾಗಿ ಹೋರಾಟ ನಡೆಸಲಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರ ಕೂಡ ಪಂಚಮಸಾಲಿ ಸಮುದಾಯದ ಮೀಸಲಾತಿ ಬಗ್ಗೆ ಸೂಕ್ತವಾದ ಕ್ರಮ ಕೈಗೊಂಡಿಲ್ಲ. ಈಗ ಸಿದ್ದರಾಮಯ್ಯನವರ ಸರ್ಕಾರ ಬಂದಿದೆ. ಮತ್ತೆ ಹೋರಾಟ ಆರಂಭಿಸಿ ಎಂದು ಪಂಚಮಸಾಲಿ ಮುಖಂಡರು ಒತ್ತಾಯಿಸುತ್ತಿದ್ದಾರೆ. ಅವರ ಸಲಹೆಯಂತೆ ಹೋರಟ ನಡೆಸುವುದು ಅನಿವಾರ್ಯವಾಗಿದೆ ಎಂದರು.
ಲೋಕಸಭಾ ಚುನಾವಣೆಗೂ ಮುನ್ನ ಮೀಸಲಾತಿ ಕಲ್ಪಿಸಬೇಕು. ನವೆಂಬರ್ 10ರಂದು ದಾವಣಗೆರೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ಬಾಡಾ ಕ್ರಾಸ್ ಬಳಿ ಇಷ್ಟಲಿಂಗ ಪೂಜೆ ಮೂಲಕ ಹೋರಾಟ ನಡೆಸಲಾಗುವುದು. 5 ಸಾವಿರಕ್ಕೂ ಹೆಚ್ಚು ಜನರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಲೋಕಸಭಾ ಚುನಾವಣೆಗೂ ಮೊದಲೇ ಮೀಸಲಾತಿ ಕಲ್ಪಿಸದಿದ್ದರೆ ಹೋರಾಟ ಇನ್ನಷ್ಟು ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.